28/08/2026
ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಜಾಬ್ ಕಾರ್ಡ್ ಮೇಳದ ಕುರಿತು ಅರಿವು
ವಿಬಿಜಿರಾಮ್ ಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕಾರ್ಮಿಕರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಗ್ರಾಮ ಪಂಚಾಯತಿ ಮಕರಿ ಹಾಗೂ ಕುಡುಪಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಕಾರ್ಮಿಕರಿಗಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಮಿಕರ ಆರೋಗ್ಯವು ಕುಟುಂಬದ ಆರ್ಥಿಕ ಸ್ಥಿರತೆ ಹಾಗೂ ಜೀವನಮಟ್ಟದೊಂದಿಗೆ ನೇರವಾಗಿ ಸಂಬಂಧ ಹೊಂದಿದ್ದು, ಗ್ರಾಮೀಣ ಪ್ರದೇಶದಲ್ಲಿ ವಿವಿಧ ಉದ್ಯೋಗ ಹಾಗೂ ಕೂಲಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸಿ, ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಸಂರಕ್ಷಣೆಯ ಕುರಿತು ಅಗತ್ಯ ಮಾಹಿತಿ ನೀಡಲಾಯಿತು.
ಶಿಬಿರದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಿರೀಶ್ ಓಲೇಕಾರ ಅವರು ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಆರೋಗ್ಯವೇ ಪ್ರತಿಯೊಬ್ಬರ ಜೀವನದ ಪ್ರಮುಖ ಸಂಪತ್ತು. ಕಾರ್ಮಿಕರು ತಮ್ಮ ದೈನಂದಿನ ಕೆಲಸದ ಸಂದರ್ಭದಲ್ಲಿ ವೈಯಕ್ತಿಕ ಸ್ವಚ್ಛತೆ, ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು, ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು ಹಾಗೂ ಆರೋಗ್ಯದಲ್ಲಿ ಯಾವುದೇ ತೊಂದರೆ ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೆ ತಕ್ಷಣವೇ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ (DYDHO) ರಾಮಪ್ಪ ಸದರಪ್ಪನವರ ಮಾತನಾಡಿ ತಂಬಾಕು ಸೇವನೆ ಇಡೀ ದೇಹವನ್ನು ಹಂತಹಂತವಾಗಿ ನಾಶ ಮಾಡುತ್ತದೆ ಹೀಗಾಗಿ ತಂಬಾಕು ಸೇವನೆ ನಿಲ್ಲಿಸಬೇಕು. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ತಂಬಾಕು ಸೇವನೆ ಬಿಡುವ ವಾಗ್ದಾನ ಮಾಡಬೇಕು ಎಂದರು.ಸಾಂಕ್ರಾಮಿಕ ರೋಗಗಳು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಆರಂಭಿಕ ಹಂತದಲ್ಲಿಯೇ ಅನಾರೋಗ್ಯದ ಲಕ್ಷಣಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂದು ಆರೋಗ್ಯದ ಮಹತ್ವವನ್ನು ವಿವರಿಸಿದರು.
ಇದೇ ಸಂದರ್ಭದಲ್ಲಿ ಜಾಬ್ ಕಾರ್ಡ್ ಮೇಳದ ಕುರಿತು ತಾಲೂಕು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಅವರು ಕಾರ್ಮಿಕರಿಗೆ ಸಮಗ್ರ ಮಾಹಿತಿ ನೀಡಿದರು. ಜಾಬ್ ಕಾರ್ಡ್ ಮೇಳದ ಉದ್ದೇಶ, ಜಾಬ್ ಕಾರ್ಡ್ ಪಡೆಯುವ ವಿಧಾನ, ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕೈಗೊಳ್ಳಲಾಗುವ ವಿವಿಧ ಕಾಮಗಾರಿಗಳ ಕುರಿತು ವಿವರಿಸಿದರು.
ವಿಬಿಜಿರಾಮ್ ಜಿ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಹಾಗೂ ಜೀವನೋಪಾಯ ಅಭಿವೃದ್ಧಿಗೆ ಪೂರಕವಾಗುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಅರ್ಹ ಕುಟುಂಬಗಳು ಜಾಬ್ ಕಾರ್ಡ್ ಪಡೆದುಕೊಂಡು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಜಾಬ್ ಕಾರ್ಡ್ ಮೇಳದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ನೋಂದಣಿ ಮಾಡಿಕೊಂಡು ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ರಮೇಶ್ ಟಿ ಜೆ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಶಬೀನಾ, ಪದ್ಮಾ ಚಳಗೇರಿ, ಡಿಇಒ ಚಂದ್ರು, ಜಿಕೆಎಂ ಗೀತಾ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
*ಆರೋಗ್ಯ ಶಿಬಿರ ಪ್ರಯೋಜನ ಪಡೆದ ಕಾರ್ಮಿಕರು*
ಆರೋಗ್ಯ ಶಿಬಿರದ ಸಂದರ್ಭದಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಕಾರ್ಮಿಕರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಅಗತ್ಯವಿರುವವರಿಗೆ ಆರೋಗ್ಯ ಸಂಬಂಧಿತ ಸಲಹೆಗಳನ್ನು ನೀಡಲಾಯಿತು. ಆಹಾರ ಪದ್ಧತಿ, ವೈಯಕ್ತಿಕ ಸ್ವಚ್ಛತೆ, ಕುಡಿಯುವ ನೀರಿನ ಬಳಕೆ, ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ವಿಧಾನ ಹಾಗೂ ಕಾಯಿಲೆಗಳ ಕುರಿತು ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದರು.